ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಡು ಚಳಿ (Karnataka Cold Wave ) ಆರಂಭವಾಗಿದೆ. ಶೀತ ಗಾಳಿ ದಟ್ಟೈಸುತ್ತಿದ್ದು; ಶಾಲಾ ಸಮಯ ಬದಲಾವಣೆಗೆ ಒತ್ತಾಯ ಕೇಳಿ ಬಂದಿದೆ. ಈ ಕುರಿತ ಮಾಹಿತಿ ಇಲ್ಲಿ ನೋಡಿ…
ರಾಜ್ಯದ ಹವಾಮಾನದಲ್ಲಿ ಸ್ಪಷ್ಟವಾದ ಬದಲಾವಣೆ ಕಾಣಿಸುತ್ತಿದ್ದು, ಚಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶೀತ ಗಾಳಿ ಹಾಗೂ ಮೋಡ ಕವಿದ ವಾತಾವರಣದ ಪರಿಣಾಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿದಿದೆ. ವಿಶೇಷವಾಗಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಜನರು ಕಡು ಚಳಿಯನ್ನು ಅನುಭವಿಸುತ್ತಿದ್ದಾರೆ.
ತಾಪಮಾನದಲ್ಲಿ ಭಾರೀ ಇಳಿಕೆ
ರಾಜ್ಯದ ವಿವಿಧೆಡೆ ಬೀಸುತ್ತಿರುವ ಶೀತ ಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಇಂದು (ಡಿಸೆಂಬರ್ 17) ಕೂಡ ಮೂರು ಜಿಲ್ಲೆಗಳಲ್ಲಿ ಶೀತ ಗಾಳಿ ಮುಂದುವರಿಯುವ ಸಾಧ್ಯತೆಯಿದೆ.
ಬೀದರ್, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಈ ಭಾಗಗಳಲ್ಲಿ ಚಳಿಯ ತೀವ್ರತೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ಹವಾಮಾನ ಇಲಾಖೆ ತಿಳಿಸಿರುವಂತೆ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನಗಳ ಕಾಲ ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 3ರಿಂದ 5 ಡಿಗ್ರಿ ಸೆಲ್ಸಿಯಸ್ ವರೆಗೆ ಇಳಿಕೆಯಾಗುವ ಸಾಧ್ಯತೆ ಇದೆ.
ಧಾರವಾಡದಲ್ಲಿ 9.5 ಡಿಗ್ರಿಗೆ ಇಳಿದ ತಾಪಮಾನ
ಡಿಸೆಂಬರ್ 16ರ ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಹಲವು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶವು ಗಣನೀಯವಾಗಿ ಕುಸಿತ ಕಂಡಿದೆ. ಧಾರವಾಡ, ಬೀದರ್, ಗದಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿ ದಾಖಲೆ ಮಟ್ಟದಲ್ಲಿ ಇಳಿಕೆಯಾಗಿದೆ.
ಉತ್ತರ ಕರ್ನಾಟಕದ ಧಾರವಾಡದಲ್ಲಿ ಕನಿಷ್ಠ ಉಷ್ಣಾಂಶವು 9.5 ಡಿಗ್ರಿ ಸೆಲ್ಸಿಯಸ್ಗೆ ಇಳಿದಿರುವುದು ಗಮನಾರ್ಹ. ಇದು ಈ ಋತುವಿನ ಅತ್ಯಂತ ಕಡಿಮೆ ತಾಪಮಾನಗಳಲ್ಲೊಂದು ಎಂದು ಹೇಳಬಹುದು.

ಮಕ್ಕಳ ಆರೋಗ್ಯದ ಬಗ್ಗೆ ಆತಂಕ
ತಾಪಮಾನ ಕುಸಿತದ ನಡುವೆ ಮಕ್ಕಳ ಆರೋಗ್ಯದ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ. ಚಳಿಯಿಂದಾಗಿ ಶೀತ, ಜ್ವರ, ಉಸಿರಾಟದ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಪೋಷಕರು ಮತ್ತು ಶಿಕ್ಷಣ ತಜ್ಞರು ಎಚ್ಚರಿಕೆ ವಹಿಸುವಂತೆ ಸಲಹೆ ನೀಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಮಹತ್ವದ ಒತ್ತಾಯವೊಂದನ್ನು ಮಾಡಿದ್ದಾರೆ. ಚಳಿಗಾಲ ಮುಗಿಯುವ ವರೆಗೆ ಶಾಲಾ ಹಾಗೂ ಕಾಲೇಜುಗಳನ್ನು ಪ್ರತಿದಿನ ಬೆಳಿಗ್ಗೆ 9.30ರಿಂದ ಆರಂಭಿಸಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Egg Cancer Rumors Fact Check- ಮೊಟ್ಟೆ ತಿಂದರೆ ಕ್ಯಾನ್ಸರ್ ಬರುತ್ತಾ? | ವಾಸ್ತವ ಏನು, ವದಂತಿ ಏನು?
ಶಾಲಾ ಸಮಯ ಬದಲಾವಣೆಗೆ ಒತ್ತಾಯ
ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ ಶಶಿಧರ ಕೋಸಂಬೆ ಅವರು, ರಾಜ್ಯದ 14 ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸುವ ಕುರಿತು ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ. ಇಂತಹ ಪರಿಸ್ಥಿತಿಯಲ್ಲಿ ಬೆಳಿಗ್ಗೆ ಬೇಗ ಶಾಲೆಗೆ ಹೋಗುವ ಮಕ್ಕಳು ಚಳಿಯಿಂದ ತೊಂದರೆ ಅನುಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಇರುವುದನ್ನು ಅವರು ಉಲ್ಲೇಖಿಸಿದ್ದಾರೆ.
ಎಚ್ಚರಿಕೆ ಅಗತ್ಯ
ಚಳಿಯ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಆರೋಗ್ಯ ಸಮಸ್ಯೆ ಇರುವವರು ಹೆಚ್ಚು ಜಾಗ್ರತೆ ವಹಿಸಬೇಕು.
ಮುಂದಿನ ಕೆಲವು ದಿನಗಳು ರಾಜ್ಯದ ಹಲವೆಡೆ ಚಳಿಯ ಪ್ರಭಾವ ಮುಂದುವರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಇರಬೇಕಾಗಿದೆ.