ರಾಜ್ಯಾದ್ಯಂತ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು; ರಾಜ್ಯದ 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Karnataka Monsoon Alert) ಘೋಷಿಸಲಾಗಿದೆ. ವಿವಿಧ ಜಿಲ್ಲೆಗಳ ಮಳೆ ಮಾಹಿತಿ ಇಲ್ಲಿದೆ…
ಕರ್ನಾಟಕದಲ್ಲಿ ಕೆಲ ದಿನಗಳ ಕಾಲ ಕಡಿಮೆಯಾಗಿದ್ದ ಮುಂಗಾರು ಮಳೆಯ ಆರ್ಭಟ ಮತ್ತೊಮ್ಮೆ ಚುರುಕುಗೊಂಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜುಲೈ 3ರಿಂದ ಮುಂದಿನ ಕೆಲ ದಿನಗಳು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು ಜನತೆಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಗಳು
ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮುನ್ಸೂಚನೆ ಪ್ರಕಾರ ಜುಲೈ 3ರಂದು ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (ಭಾರೀ ಮಳೆಯ ಮುನ್ಸೂಚನೆ) ನೀಡಲಾಗಿದೆ.
ಪ್ರಮುಖ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಳಗಾವಿ ಆರೆಂಜ್ ಅಲರ್ಟ್. ಬೀದರ್, ಧಾರವಾಡ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜುಲೈ 4ರಿಂದ 9ರ ವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರಿಂದ ಸಾಧಾರಣವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದನ್ನು ಸೂಚಿಸಲಾಗಿದೆ.

ಜುಲೈ 2ರಂದು ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆ
ನಿನ್ನೆ (ಜುಲೈ 2ರಂದು) ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಹವಾಮಾನ ಇಲಾಖೆಯ ವೀಕ್ಷಣೆ ಪ್ರಕಾರ ಪ್ರಮುಖ ಮಳೆಯ ಅಂಕಿ-ಅಂಶಗಳು ಹೀಗಿವೆ:
- ಶಿವಮೊಗ್ಗ ಜಿಲ್ಲೆಯ ಆಗುಂಬೆ – 12 ಸೆಂ.ಮೀ.
- ಉತ್ತರ ಕನ್ನಡ ಜಿಲ್ಲೆಯ ಕದ್ರಾ – 10 ಸೆಂ.ಮೀ., ಜೋಯಿಡಾ – 9 ಸೆಂ.ಮೀ., ಗೇರುಸೊಪ್ಪಾ – 7 ಸೆಂ.ಮೀ.
- ಉಡುಪಿ ಜಿಲ್ಲೆಯ ಸಿದ್ದಾಪುರ – 6 ಸೆಂ.ಮೀ., ಕಾರ್ಕಳ – 5 ಸೆಂ.ಮೀ.
- ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ – 5 ಸೆಂ.ಮೀ.
- ಬೆಳಗಾವಿ ಜಿಲ್ಲೆಯ ಲೋಂಡಾ – 5 ಸೆಂ.ಮೀ.
- ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕಮ್ಮರಡಿ, ಕೊಪ್ಪ – ತಲಾ 5 ಸೆಂ.ಮೀ.
ಜಿಲ್ಲಾವಾರು ವಿಶೇಷ ಮಳೆ ಮಾಹಿತಿ
ಕೊಡಗು ಜಿಲ್ಲೆಯಲ್ಲಿ ಮಳೆ ಇನ್ನಷ್ಟು ಚುರುಕಾಗಿರುವ ಕಾರಣ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಜುಲೈ 3ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಮಳೆ ಹೆಚ್ಚಿದರೆ ಹಳ್ಳ-ಕೊಳ್ಳೆಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಕಾರಣ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.
ಬೆಳಗಾವಿ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಜುಲೈ 2ರಂದು ನಿರಂತರವಾಗಿ ಜಿಟಿಜಿಟಿ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಹಳೆಯ ಮನೆಗಳ ಗೋಡೆಗಳು ಕುಸಿದು ಬಿದ್ದಿದ್ದು ಸ್ಥಳೀಯ ಆಡಳಿತ ಅವಲೋಕನೆ ನಡೆಸುತ್ತಿದೆ. ಮಳೆಯ ಪ್ರಮಾಣ ಹೆಚ್ಚಾಗುವುದರಿಂದ ಅಲ್ಲಿಯ ಜನರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯ ಮುಂಗಾರು ವೃಷ್ಟಿಯಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಸಂಜೆ 1 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಇದು ನದಿಪಾತದ ಪ್ರದೇಶಗಳಲ್ಲಿ ನೀರಿನ ಮಟ್ಟ ಹೆಚ್ಚುವ ಸಾಧ್ಯತೆ ಇದ್ದು ಜನರು ಎಚ್ಚರಿಕೆ ವಹಿಸಬೇಕು.
ವಿಜಯನಗರ ಜಿಲ್ಲೆಯ ತುಂಗಭದ್ರಾ ಡ್ಯಾಂ ಹೊಸಪೇಟೆಯ ತುಂಗಭದ್ರಾ ಜಲಾಶಯದಲ್ಲಿ ಕೂಡ ಒಳಹರಿವು ಮತ್ತು ಸಂಗ್ರಹ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಬುಧವಾರ 6 ಕ್ರಸ್ಟ್ ಗೇಟ್‌ಗಳನ್ನು ತೆರೆಯಲಾಗಿದ್ದು, ಸುಮಾರು 15,100 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಈ ಪ್ರದೇಶದ ಗ್ರಾಮಸ್ಥರು ನದಿ ತೀರ ಪ್ರದೇಶಗಳಿಂದ ದೂರ ಇರಲು ತಿಳಿಸಲಾಗಿದೆ.
ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಇದರಿಂದ ಕೃಷಿ ಚಟುವಟಿಕೆಗಳು ಬಿರುಸುಗೊಳ್ಳಲಿವೆ. ಆದರೆ, ಜನರ ಸುರಕ್ಷತೆಯನ್ನೂ ಗಮನದಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯವಾಗಿದೆ.